
ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.
ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ ಎಂದಿದ್ದಾರೆ.
1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.