ಶ್ರೀನಗರ: ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಎನ್ಕೌಂಟರ್ ನಡೆಸಲಾಗಿದೆ.
ಉಗ್ರರು ಅವಿತಿರುವ ಬಗ್ಗೆ ಮಾಹಿತಿ ಪಡೆದ ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು, ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾಪಡೆಗಳು ಕಾರ್ಯಾಚರಣೆ ತೀವ್ರಗೊಳಿಸುವುದರೊಂದಿಗೆ ಮೂವರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ.
ಜೈಷ್ ಎ ಮೊಹಮ್ಮದ್ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಪುಲ್ವಾಮಾ ಜಿಲ್ಲೆಯ ಚಂದಗಾಮ್ ನಲ್ಲಿ ಹತ್ಯೆ ಮಾಡಲಾಗಿದೆ. ಇವರಲ್ಲಿ ಒಬ್ಬ ಪಾಕಿಸ್ತಾನಿ ಪ್ರಜೆಯಾಗಿದ್ದಾನೆ. ಘಟನೆಯ ಸ್ಥಳದಲ್ಲಿ 2 M-4 ಕಾರ್ಬೈನ್ಗಳು ಮತ್ತು 1 AK ಸರಣಿ ರೈಫಲ್, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಐಜಿಪಿ ಮಾಹಿತಿ ನೀಡಿದ್ದಾರೆ.