
ಬೆಂಗಳೂರು: ಪರಭಾಷೆ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಾ.ರಾ. ಗೋವಿಂದು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ನೆರೆ ರಾಜ್ಯಗಳಲ್ಲಿ ಪರಭಾಷೆ ಚಿತ್ರಗಳಿಗಿರುವ ಟಿಕೆಟ್ ದರ ಪರಿಶೀಲನೆ ನಡೆಸಲಾಗುವುದು. ಅಲ್ಲಿ ಟಿಕೆಟ್ ದರ ಎಷ್ಟಿದೆ ಎಂಬುದನ್ನು ಪರಿಶೀಲಿಸುತ್ತೇವೆ ಅದಕ್ಕೆ ತಕ್ಕಂತೆ ರಾಜ್ಯದಲ್ಲಿ ನಿಯಂತ್ರಣ ತರುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಲಾತ್ಮಕ ಚಿತ್ರಗಳಿಗೆ ಉತ್ತೇಜನ ನೀಡಲಾಗುವುದು. ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕಾಗಿ ಮಿನಿ ಚಿತ್ರಮಂದಿರ ನಿರ್ಮಾಣ ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿಯೂ ಮಿನಿ ಚಿತ್ರಮಂದಿರಗಳನ್ನು ಸ್ಥಾಪಿಸಲಾಗುತ್ತದೆ. 200 ಆಸನಗಳ ಮಿನಿ ಚಿತ್ರಮಂದಿರ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.