
ಚಾಮರಾಜನಗರ: ಗೋಪಾಲಪುರ ಗ್ರಾಮದ ಬಳಿ ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಬೆಳಗ್ಗೆ ಗವಿಯಪ್ಪ ಮತ್ತು ಮಧ್ಯಾಹ್ನ ಶೇಖರಪ್ಪ ಅವರ ಮೇಲೆ ಹುಲಿ ದಾಳಿ ಮಾಡಿದೆ. ಹುಲಿ ದಾಳಿಯಿಂದ ತಪ್ಪಿಸಿಕೊಳ್ಳಲು ಗವಿಯಪ್ಪ ಮಚ್ಚು ಬೀಸಿದ್ದರು. ಗಂಭೀರವಾಗಿ ಗಾಯಗೊಂಡ ಹುಲಿ ಬಾಳೆ ತೋಟದಲ್ಲಿ ಅಡಗಿಕೊಂಡಿದೆ.
ಇಬ್ಬರು ರೈತರ ಮೇಲೆ ಹುಲಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ರೈತರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.