ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಆರೋಗ್ಯ ಇಲಾಖೆ ಆಂಧ್ರಪ್ರದೇಶ ಸರ್ಕಾರಕ್ಕೆ ವರದಿ ಕೇಳಿದೆ.
ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ ಬಳಕೆ ಮಾಡಿದ್ದು ನಿಜ ಎಂದು ಸ್ವತಃ ಟಿಟಿಡಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ವರದಿಯನ್ನು ಪರಿಶೀಲಿಸಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಜೊತೆ ಮಾತನಾಡಿರುವ ಸಚಿವ ಜೆ.ಪಿ.ನಡ್ಡಾ, ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ, ಕಲಬೆರಿಕೆ ತುಪ್ಪ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಜೆ.ಪಿ ನಡ್ಡಾ, ತಿರುಪತಿ ಲಡ್ಡು ಪ್ರಸಾದ ವಿಚಾರವಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಪರಿಶೀಲನೆ ನಡೆಸಲಿದ್ದು, ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.