ಬೆಂಗಳೂರು: ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ ಕಾಂಗ್ರೆಸ್ ನೀತಿಯಿಂದಾಗಿ ಈಗ ತಿರುಪತಿ ಲಡ್ಡುಗೆ ಸರ್ಕಾರ ನಂದಿನಿ ತುಪ್ಪ ಸರಬರಾಜು ಸ್ಥಗಿತಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ತಿರುಪತಿ ಲಡ್ಡು ತಯಾರಿಕೆಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ ನಳೀನ್ ಕುಮಾರ್ ಕಟೀಲ್ ಅವರೇ ಈಗ ಹೇಳಿ? ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ? ಅಥವಾ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿ ಅವರು ಮಾತ್ರ ಹಿಂದೂ ವಿರೋಧಿಯೋ? ಎಂದು ಪ್ರಶ್ನಿಸಿದ್ದಾರೆ.
ನಮಗೆ ಜನರ ಧಾರ್ಮಿಕ ನಂಬಿಕೆಗಳ ಜೊತೆಗೆ ಹೈನುಗಾರರ ಬದುಕು ಮುಖ್ಯ. ಹೀಗಾಗಿ ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ತಿರುಪತಿ ದೇವಾಲಯದವರು ಒಪ್ಪುವುದಾದರೆ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಯೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
https://www.facebook.com/100044576433033/posts/pfbid0ZciQ8xZxR1ECSxT2D8p8NZdTgP9SzL7zPe7RNJQ9yRyiswiJC5jqmiiYvAvfNfLml/?mibextid=Nif5oz