ಸೇಲಂ: ಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುವ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ ಬಸ್‌ನ ಮುಂದೆ ಜಿಗಿದಿರುವ ದೃಶ್ಯದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಮಹಿಳೆ ಅಪಘಾತದಲ್ಲಿ ಗಾಯಗೊಂಡರೆ ಆಕೆಯ ಕುಟುಂಬಕ್ಕೆ 45,000 ರೂ.ಗಳನ್ನು ನೀಡಲಾಗುತ್ತದೆ ಎಂದು ಯಾರೋ ಹೇಳಿದ ಮಾತನ್ನು ಕೇಳಿಸಿಕೊಂಡು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ. ಮಗನ ಕಾಲೇಜು ಶುಲ್ಕ ಪಾವತಿಸಲು ಹಣದ ಅಗತ್ಯವಿದ್ದ ಕಾರಣ ಮಹಿಳೆ ತನ್ನ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ.
ಸದ್ಯ, ಈ ವಿಡಿಯೋ ಭಾರಿ ವೈರಲ್ ಆಗಿದ್ದು, ತಾಯಿಯ ಮಮತೆಗೆ ನೆಟ್ಟಿಗರ ಮನಕರಗಿ ಹೋಗಿದೆ. ಅನೇಕರು ದುಃಖ ವ್ಯಕ್ತಪಡಿಸಿದ್ದಾರೆ. ಮಗನ ಫೀಸ್ ಕಟ್ಟಲು ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಸನ್ನಿವೇಶವನ್ನು ಪ್ರಶ್ನಿಸಿ ಹಲವರು ಆಕ್ರೋಶ ಹೊರ ಹಾಕಿದ್ದಾರೆ.
ಉತ್ತಮ ಭವಿಷ್ಯದ ನಿರೀಕ್ಷೆಯಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಜೀವನ ಸಾಗಿಸಲು ಪ್ರಯತ್ನಿಸುವವರು ಎದುರಿಸುತ್ತಿರುವ ತೊಂದರೆಗಳನ್ನು ಈ ಘಟನೆ ಎತ್ತಿ ತೋರಿಸುತ್ತದೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ನಡೆಯುತ್ತಿದೆ.