ಬೆಂಗಳೂರು: ಟೋಯಿಂಗ್ ವ್ಯವಸ್ಥೆ ಸುಧಾರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದ ನಂತರ ತಾತ್ಕಾಲಿಕವಾಗಿ ಟೋಯಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದ್ದು, ಹೊಸ ಮಾರ್ಗಸೂಚಿ ಬಿಡುಗಡೆಯಾದ ನಂತರ ಟೋಯಿಂಗ್ ಮತ್ತೆ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇನ್ನು ಸಂಚಾರ ದಟ್ಟಣೆ, ಅಪಘಾತ, ಪಾರ್ಕಿಂಗ್ ಸಮಸ್ಯೆ ಕುರಿತಾಗಿ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಸಂಜೆ 6 ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿರುವ ಸಭೆಯಲ್ಲಿ ಗೃಹ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಗೃಹಸಚಿವರು ಸಂಚಾರ ದಟ್ಟಣೆ, ಅಪಘಾತ, ಪಾರ್ಕಿಂಗ್ ಸಮಸ್ಯೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ. ಸಭೆಯ ಬಳಿಕ ಹೊಸ ನಿಯಮಾವಳಿ ಜಾರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.