ಬೆಂಗಳೂರು: ಸಂಚಾರ ನಿಯಮ ಪಾಲಿಸದವರ ಡಿಎಲ್ ಕ್ಯಾನ್ಸಲ್ ಮಾಡುವ ನಿಯಮವನ್ನು ರಾಜ್ಯವ್ಯಾಪಿ ಜಾರಿಗೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ.
ಇನ್ನು ಮುಂದೆ ರಾಜ್ಯದ ಹೆದ್ದಾರಿಗಳಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದಲ್ಲಿ ಚಾಲನಾ ಪರವಾನಿಗೆ ರದ್ದು ಮಾಡಲಾಗುವುದು. ಬೆಂಗಳೂರು ನಗರ ಸೇರಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ನಿಯಮ ಜಾರಿಯಲ್ಲಿದ್ದು, ರಾಜ್ಯವ್ಯಾಪಿ ವಿಸ್ತರಿಸಲು ಪೊಲೀಸ ಇಲಾಖೆ ಚಿಂತನೆ ನಡೆಸಿದೆ.
ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಸಂಚಾರ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಉದ್ದೇಶದಿಂದ ರಾಜ್ಯ ರಸ್ತೆ ಮತ್ತು ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು ಎಲ್ಲಾ ಪೊಲೀಸ್ ಠಾಣೆಗಳಿಗೆ ಈ ಕುರಿತಾಗಿ ಸೂಚನೆ ನೀಡಿದ್ದಾರೆ.
ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಎರಡು ತಿಂಗಳಿಂದ ಕಟ್ಟುನಿಟ್ಟಾಗಿ ಸಂಚಾರ ನಿಯಮ ಜಾರಿಯಲ್ಲಿದ್ದು, ಮುಂಜಾಗ್ರತಾ ಕ್ರಮ ಕೈಗೊಂಡ ಕಾರಣ ಅಪಘಾತಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಸಂಚಾರ ನಿಯಮ ಜಾರಿಗೊಳಿಸಲಾಗುವುದು.
ಅತಿ ವೇಗದ ಚಾಲನೆ, ಅಜಾಗರೂಕತೆಯ ಚಾಲನೆ, ಶಿಸ್ತುಪಥ ಉಲ್ಲಂಘನೆ, ವ್ಹೀಲಿಂಗ್, ಚಾಲನೆ ಮಾಡುವಾಗ ಮೊಬೈಲ್ ಬಳಕೆ, ಹೆಲ್ಮೆಟ್ ರಹಿತ ಚಾಲನೆ, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಲಾದ ಪ್ರಕರಣಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ಚಾಲಕರು, ಸವಾರರ ಡಿಎಲ್ ಜಪ್ತಿ ಮಾಡಿ ಅಮಾನತು ಮಾಡುವಂತೆ ಸಾರಿಗೆ ಇಲಾಖೆಗೆ ರವಾನೆ ಮಾಡಲಾಗುತ್ತದೆ.
ಮೊದಲ ಬಾರಿ ಸಂಚಾರ ನಿಯಮ ಉಲ್ಲಂಘನೆಗೆ ಮೂರು ತಿಂಗಳು ಡಿಎಲ್ ಅಮಾನತು ಮಾಡಲು ಕ್ರಮ ಕೈಗೊಳ್ಳಲಾಗುವುದು. ಪದೇಪದೇ ಸಂಚಾರ ನಿಯಮ ಉಲ್ಲಂಘಿಸಿದಲ್ಲಿ ಶಾಶ್ವತವಾಗಿ ಡಿಎಲ್ ವಜಾ ಮಾಡಲು ಕಾಯ್ದೆಯಲ್ಲಿ ಅವಕಾಶವಿದ್ದು, ಇದನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಅಲ್ಲದೇ, ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಸ್ವಯಂ ಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಹಂತ ಹಂತವಾಗಿ ಎಲ್ಲಾ ಹೆದ್ದಾರಿಗಳಲ್ಲಿಯೂ ಈ ರೀತಿ ಕ್ಯಾಮೆರಾಗಳನ್ನು ಅಳವಡಿಸಿ ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ನಿಗಾ ವಹಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.