ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ನಿಯಮ ಉಲ್ಲಂಘಿಸುವವರ ಡ್ರೈವಿಂಗ್ ಲೈಸೆನ್ಸ್ ರದ್ದು ಮಾಡಲು ಕ್ರಮಕೈಗೊಂಡಿದೆ.
ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುವುದು, ನಿಯಮ ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಅಂತಹವರ ಡ್ರೈವಿಂಗ್ ಲೈಸೆನ್ಸ್ ಅನ್ನು ಮೂರು ತಿಂಗಳು ರದ್ದು ಮಾಡಲು ತಿಳಿಸಲಾಗಿದೆ.
ಕೇಂದ್ರ ಮೋಟಾರು ವಾಹನ ಕಾಯ್ದೆಯ ಪ್ರಕಾರ, ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಮೋಟಾರು ವಾಹನಗಳ ನಿಯಮದ ಅನ್ವಯ ರಾಜ್ಯದಲ್ಲಿ ದ್ವಿಚಕ್ರವಾಹನ ಸವಾರರು ಮತ್ತು ನಾಲ್ಕು ವರ್ಷ ಮೇಲ್ಪಟ್ಟ ಹಿಂಬದಿ ಸವಾರರು ಕೂಡ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.
ಸಾರಿಗೆ ಇಲಾಖೆ ಆದೇಶದ ಪ್ರಕಾರ, ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಾಲನೆ ಮಾಡುವವರ ಡ್ರೈವಿಂಗ್ ಲೈಸೆನ್ಸ್ ಅನ್ನು ಮೂರು ತಿಂಗಳು ರದ್ದು ಮಾಡಲಾಗುವುದು. ಇದರೊಂದಿಗೆ ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡುವವರ ಲೈಸೆನ್ಸ್ ಕೂಡ ರದ್ದು ಮಾಡಲಾಗುತ್ತದೆ ಎಂದು ಹೇಳಲಾಗಿದೆ.