ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ನಿರಾಸೆಯಾಗಿದೆ. ಇದರಿಂದಾಗಿ ವರ್ಗಾವಣೆ ಬಯಸಿದ್ದ ಸುಮಾರು 75 ಸಾವಿರಕ್ಕೂ ಅಧಿಕ ಶಿಕ್ಷಕರು ನಿರಾಸೆ ಅನುಭವಿಸುವಂತಾಗಿದೆ. ಕಳೆದ ಎರಡು ವರ್ಷಗಳಿಂದ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಈ ವರ್ಷವೂ ನಡೆಯುವುದು ಅನುಮಾನ ಎಂದು ಹೇಳಲಾಗಿದೆ
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಹೂಡಿರುವ ದಾವೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆಯಾಜ್ಞೆ ನೀಡಲಾಗಿದೆ. ಈ ಕಾರಣದಿಂದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ 2020 -21 ನೇ ಸಾಲಿನ ಸರ್ಕಾರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮಾಹಿತಿ ನೀಡಿದ್ದಾರೆ.
2020 -21 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು, ಸಹಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಹೇಳಲಾಗಿದೆ.