ಬೆಂಗಳೂರು: ಶಿಕ್ಷಕರ ವರ್ಗಾವಣೆ ಬಗ್ಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್ ಸೂಚನೆ ಹೊರಡಿಸಿದ್ದಾರೆ.
ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ ಆದೇಶದಂತೆ 2020 -21 ನೇ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲು ತಿಳಿಸಲಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲೆಗಳ ಶಿಕ್ಷಕರು ಮತ್ತು ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗೆ ಕೌನ್ಸೆಲಿಂಗ್ ನಡೆಸಲು ಡಿಸೆಂಬರ್ 14 ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿತ್ತು.
ಕೆಲವರು ಇದನ್ನು ಪ್ರಶ್ನಿಸಿ ಕರ್ನಾಟಕ ಆಡಳಿತ ನ್ಯಾಯ ಮಂಡಳಿಗೆ ಅರ್ಜಿ ಸಲ್ಲಿಸಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯ ಮಂಡಳಿ ಸೂಚಿಸಿತ್ತು. ಮಂಡಳಿ ಆದೇಶದಂತೆ ವರ್ಗಾವಣೆ ಪ್ರಕ್ರಿಯೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.