ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ ಶೇಕಡ 1 ರಷ್ಟು ಮೀಸಲಾತಿ ಕಲ್ಪಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯ ಸರ್ಕಾರದಿಂದ ಈ ಕುರಿತಾಗಿ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದ್ದು, ಈ ಮೂಲಕ ಇಡೀ ದೇಶದಲ್ಲೇ ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ಕಲ್ಪಿಸಿದ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠದಲ್ಲಿ ಮಂಗಳವಾರ ಈ ಅರ್ಜಿಯ ವಿಚಾರಣೆ ನಡೆದಿದೆ. ಈ ಸಂದರ್ಭದಲ್ಲಿ ಸರ್ಕಾರಿ ವಕೀಲರಾದ ವಿಜಯಕುಮಾರ ಪಾಟೀಲ ಅವರು, ರಾಜ್ಯದ ಎಲ್ಲ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಶೇಕಡ 1 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಈ ಸಂಬಂಧ ಕರ್ನಾಟಕ ನಾಗರೀಕ ಸೇವಾ ನೇಮಕ ನಿಯಮಕ್ಕೆ ತಿದ್ದುಪಡಿ ತಂದು 2021 ರ ಜುಲೈ 6 ರಂದು ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.