ಬೆಂಗಳೂರು : ಉತ್ತರಖಾಂಡದಲ್ಲಿ ಸಿಲುಕಿರುವ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಸಾವಿಗೀಡಾದವರ ಮೃತದೇಹಗಳನ್ನು ಆದಷ್ಟು ಶೀಘ್ರ ಕುಟುಂಬದವರಿಗೆ ತಲುಪಿಸಲಾಗುವುದು ಮತ್ತು ರಕ್ಷಿಸಲ್ಪಟ್ಟಿರುವ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು.
ಇದಕ್ಕಾಗಿ ನಮ್ಮ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದೆ. ಮೃತರ ಸಂಖ್ಯೆ 9ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಡೆಹ್ರಾಡೋನ್ ನಲ್ಲಿ ರಕ್ಷಣಾ ಕಾರ್ಯದ ಉಸ್ತುವಾರಿ ನಿರ್ವಹಿಸುತ್ತಿರುವ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿ, ಧೈರ್ಯ ತುಂಬಿದ್ದೇನೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎಂಬ ಸೂಚನೆಯನ್ನು ಕೃಷ್ಣಬೈರೇಗೌಡರಿಗೆ ನೀಡಿದ್ದೇನೆ. ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ. ಈ ಬಗ್ಗೆ ಯಾರೊಬ್ಬರೂ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿ ಕನ್ನಡಿಗನ ಪ್ರಾಣ ರಕ್ಷಣೆಯೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.