ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲಾ ಪಂಚಾಯಿತಿ ಮಾಗಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಚರಣ್ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಹಿಂದೆ ಟ್ರಕ್ ಟರ್ಮಿನಲ್ ನಲ್ಲಿ ಕಾರ್ಯನಿರ್ವಹಿಸುವಾಗ ಚರಣ್ ಕುಮಾರ್ ಅಕ್ರಮದಲ್ಲಿ ಪಾಲ್ಗೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಹೀಗಾಗಿ ಅವರನ್ನು ಬಂಧಿಸಿ ಶನಿವಾರ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳುಹಿಸಲಾಗಿದೆ. 2021 -22 ರಲ್ಲಿ ರಾಜ್ಯವ್ಯಾಪಿ ಟ್ರಕ್ ಟರ್ಮಿನಲ್ ಗಳ ನವೀಕರಣ ಹೆಸರಲ್ಲಿ ನಿಗಮದಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದ ಆರೋಪ ಕೇಳಿ ಬಂದಿದೆ. ಈ ವೇಳೆ ಕಾಮಗಾರಿ ನಡೆಯದೇ ಇದ್ದರೂ ಕಾಮಗಾರಿ ಉತ್ತಮವಾಗಿದ್ದು, ಗುಣಮಟ್ಟದಿಂದ ಕೂಡಿದೆ ಎಂದು ಸುಮಾರು 300ಕ್ಕೂ ಅಧಿಕ ಕಡತಗಳಿಗೆ ಆರೋಪಿ ಸಹಿ ಹಾಕಿದ್ದರು ಎನ್ನಲಾಗಿದೆ.
ಜಲಸಂಪನ್ಮೂಲ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚರಣ್ ಕುಮಾರ್ ಅವರನ್ನು ನಿಯೋಜನೆ ಮೇರೆಗೆ ದೇವರಾಜ ಅರಸು ಟ್ರಕ್ ಟರ್ಮಿನಲ್ ಗೆ ವರ್ಗಾವಣೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಒತ್ತಡಕ್ಕೆ ಒಳಗಾಗಿ ದೃಢೀಕರಣ ಪತ್ರ ನೀಡಿದ್ದರು ಎಂದು ಹೇಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಟರ್ಮಿನಲ್ ಮಾಜಿ ಅಧ್ಯಕ್ಷ ಡಿ.ಎಸ್. ವೀರಯ್ಯ ಅವರನ್ನು ಬಂಧಿಸಿದ್ದು, ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್. ಶಂಕರಪ್ಪ ಮತ್ತು ಅವರ ಸಹೋದರ ಹೊನ್ನಪ್ಪ ನ್ಯಾಯಾಂಗ ಬಂಧನದಲ್ಲಿದ್ದಾರೆ.