ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 20.19 ಕೋಟಿ ರೂ.ಗಳನ್ನು ಬಳ್ಳಾರಿ ಲೋಕಸಭೆ ಚುನಾವಣೆಗೆ ಬಳಕೆ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ದೋಷಾರೋಪ ಪಟ್ಟಿಯಲ್ಲಿ ತಿಳಿಸಿದೆ.
ವಾಲ್ಮೀಕಿ ನಿಗಮದ 94 ಕೋಟಿ ರೂ. ಅಕ್ರಮ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಮೊದಲ ಆರೋಪಿಯಾಗಿ ಹೆಸರಿಸಿರುವ ಇಡಿ ಈ ಮೊತ್ತದಲ್ಲಿ 20.19 ಕೋಟಿ ರೂ.ಗಳನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಳಸಿಕೊಳ್ಳಲಾಗಿದೆ ಎಂದು ಉಲ್ಲೇಖಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 4970 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ನಿಗಮದ ಅಕ್ರಮದ ಹಣವನ್ನು ಬಳ್ಳಾರಿ ಚುನಾವಣೆಗೆ ಬಳಸಿರುವುದಾಗಿ ಇಡಿ ದೋಷಾರೋಪ ಪಟ್ಟಿಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, ಬಳ್ಳಾರಿ ಸಂಸದ ಇ. ತುಕಾರಾಂ ಅವರ ಸದಸ್ಯತ್ವವನ್ನು ಚುನಾವಣಾ ಆಯೋಗ ವಜಾ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಇಡಿ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ನಾಗೇಂದ್ರ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ದಳ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ನಾಗೇಂದ್ರ ಅವರನ್ನು ಆರೋಪಿ ಎಂದು ಉಲ್ಲೇಖಿಸಿಲ್ಲ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ಕೊಟ್ಟು ಅವರನ್ನು ರಕ್ಷಿಸಲಾಗಿದೆ ಎಂದು ಆರೋಪಿಸಿದ್ದಾರೆ.