ತುಮಕೂರು: ತುಮಕೂರು ಸುತ್ತಮುತ್ತ ರಾಜ್ಯದ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ತುಮಕೂರು ಸಮೀಪ ಎರಡು ಕಡೆ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಭೂಮಿ ಗುರುತಿಸಲಾಗಿದೆ. ವಸಂತ ನರಸಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಂತೆ ಇರುವ ಮೂರು ಸಾವಿರ ಎಕರೆ ಭೂಮಿ ಗುರುತಿಸಲಾಗಿದೆ. ತುಮಕೂರು ತಾಲೂಕಿನ ಸೀಬಿ ಹತ್ತಿರ ಐದು ಸಾವಿರ ಎಕರೆ ಭೂಮಿಯನ್ನು ನಕ್ಷೆ ಮೂಲಕ ಗುರುತಿಸಲಾಗಿದ್ದು, ಈ ಎರಡು ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಿ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.