ರಾಜಸ್ಥಾನದ ಉದಯಪುರದ ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಮಂಗಳವಾರ ಇಬ್ಬರು ವ್ಯಕ್ತಿಗಳು ಯುವಕನ ಶಿರಚ್ಛೇದ ಮಾಡಿದ್ದಾರೆ.
ಮೃತರು ಕೆಲವು ದಿನಗಳ ಹಿಂದೆ ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹಂಚಿಕೊಂಡಿದ್ದ ಹಿನ್ನಲೆಯಲ್ಲಿ ಹತ್ಯೆ ಮಾಡಲಾಗಿದೆ.
ಹಂತಕರು ಶಿರಚ್ಛೇದನದ ವಿಡಿಯೊ ಪೋಸ್ಟ್ ಮಾಡಿ ಪ್ರಧಾನಿ ನರೇಂದ್ರ ಮೋದಿಯವರ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆ.
ಘಟನೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು, ನಂತರ ಪ್ರದೇಶದಲ್ಲಿ ಅಂಗಡಿಗಳನ್ನು ಮುಚ್ಚಲಾಯಿತು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಎಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇನ್ಸ್ ಪೆಕ್ಟರ್ ಜನರಲ್ ಗಳಿಗೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದು, ಶಾಂತಿ ಕಾಪಾಡಿಕೊಳ್ಳಲು ನಾಗರಿಕರಿಗೆ ಮನವಿ ಮಾಡಿದ್ದಾರೆ. ಘಟನೆಯ ಸಂಬಂಧಿತ ಯಾವುದೇ ವಿಡಿಯೊವನ್ನು ಹಂಚಿಕೊಳ್ಳಬೇಡಿ ಎಂದು ಹೇಳಿದ್ದಾರೆ.
“ಉದಯಪುರದಲ್ಲಿ ಯುವಕನೊಬ್ಬನ ಭೀಕರ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಈ ಘಟನೆಯಲ್ಲಿ ಭಾಗಿಯಾಗಿರುವ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಾನು ಎಲ್ಲರಿಗೂ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ ಮತ್ತು ಕೃತ್ಯದ ವೀಡಿಯೊವನ್ನು ಹಂಚಿಕೊಳ್ಳಬೇಡಿ ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
ಆರೋಪಿಗಳ ಪತ್ತೆಗೆ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಈ ಕೃತ್ಯ ಎಸಗಿರುವುದಾಗಿ ಹೇಳಿಕೊಳ್ಳುವ ವ್ಯಕ್ತಿಗಳ ವಿಡಿಯೋದ ಮೇಲೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಉದಯಪುರದ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ನೆರವು ನೀಡಲಾಗುವುದು ಎಂದು ಉದಯ್ ಪುರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.