
ಉಡುಪಿ: ಆಗುಂಬೆ ಘಾಟಿಯಲ್ಲಿ ಆಗಸ್ಟ್ 31 ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಅವರು ಭಾರಿ ವಾಹನಗಳ ಸಂಚಾರ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಆಗುಂಬೆ ಘಾಟಿಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 169 ಎ 11 ನೇ ತಿರುವಿನಲ್ಲಿ ಭೂಕುಸಿತವಾಗಿದ್ದರಿಂದ ಜುಲೈ 31 ರವರೆಗೆ ಬಸ್ ಗಳು ಸೇರಿದಂತೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು.
ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಬಸ್ ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬಸ್ ಗಳು ಸೇರಿದಂತೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ್ದು, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಆಗಸ್ಟ್ 31 ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿರ್ಬಂಧ ಆದೇಶ ಚಾಲ್ತಿಯಲ್ಲಿರುತ್ತದೆ ಎಂದು ಹೇಳಲಾಗಿದೆ.