ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ, ಕಾರಿನಲ್ಲಿ ಬಂದು ಮಲಗಿದ್ದ ಮಗ ಇದ್ದಕ್ಕಿದ್ದಂತೆ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.
32 ವರ್ಷದ ಗುರುರಾಜ್ ಮೃತ ದುರ್ದೈವಿ. ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ಗುರುರಾಜ್, ತನ್ನ ತಂದೆಯನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದರು. ಶುಕ್ರವಾರ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ಗುರುರಾಜ್ ತಂದೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಉಳಿದುಕೊಳ್ಳಲು ಜಾಗವಿಲ್ಲವೆಂದು ಗುರುರಾಜ್ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ತನ್ನ ಕಾರಿನಲ್ಲಿ ಬಂದು ಮಲಗಿದ್ದಾರೆ.
ಕಾರಿನ ಗ್ಲಾಸ್ ಮುಚ್ಚಿ, ಎಸಿ ಆನ್ ಮಾಡಿ ಮಲಗಿದ್ದವರು ಬೆಳಗಾಗುವಷ್ಟರಲ್ಲಿ ಕಾರಿನಲ್ಲಿಯೇ ಸಾವನ್ನಪ್ಪಿದ್ದಾರೆ. ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮಣಿಪಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕವೇ ಸಾವಿನ ನಿಖರ ಕಾರಣ ತಿಳಿಯಲಿದೆ.