ಬೆಂಗಳೂರು: ಪಡಿತರ ಚೀಟಿ ವಿತರಣೆಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಆಹಾರ ಖಾತೆ ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಸದಸ್ಯ ಎಲ್. ನಾಗೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಈಗಾಗಲೇ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದವರಿಗೆ ಹೊಸ ಪಡಿತರ ಚೀಟಿ ವಿತರಣೆ ಕಾರ್ಯ ಆರಂಭವಾಗಿದೆ ಎಂದು ಹೇಳಿದ್ದಾರೆ.
ಅರ್ಜಿಗಳ ಸಲ್ಲಿಕೆ ಹಿರಿತನದ ಅನುಸಾರ ಆದ್ಯತಾ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತಿದೆ. ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರ ಸ್ಥಳ ಪರಿಶೀಲನೆ ಕಾರ್ಯ ವಿಳಂಬವಾಗಿತ್ತು. ಅಲ್ಲದೆ, ಬಯೋಮೆಟ್ರಿಕ್ ನಿಲ್ಲಿಸಿದ್ದ ಕಾರಣ ಪಡಿತರ ಚೀಟಿ ವಿತರಣೆ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಈಗ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದ್ದು, ಅರ್ಹ ಅರ್ಜಿದಾರರಿಗೆ ಹೊಸ ಪಡಿತರ ಚೀಟಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.