ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಚಿಂತನೆ ನಡೆಸಿದೆ. ಬಿಜೆಪಿ ಆಡಳಿತ ಇರುವ ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಸಚಿವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕೇಂದ್ರ ಸರ್ಕಾರ ಕೂಡ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ.
ಲೋಕಸಭೆ ಚುನಾವಣೆಗೆ ಮೊದಲೇ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುವ ಬಗ್ಗೆ ಆರಂಭಿಕ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಬಿಜೆಪಿಯ ಪ್ರಮುಖ ಭರವಸೆಗಳಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಮೂಲಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಾಧ್ಯವಾಗಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಲಾಗಿದೆ.
ಈಗ ಬಿಜೆಪಿಯ ಮೂರನೇ ಮುಖ್ಯ ಭರವಸೆಯಾಗಿರುವ ಏಕರೂಪ ನಾಗರಿಕ ಸಂಹಿತೆಯನ್ನು 2024ರ ಲೋಕಸಭೆ ಚುನಾವಣೆ ವೇಳೆಗೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ. ಉತ್ತರಾಖಂಡ್ ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಉತ್ತರಪ್ರದೇಶದಲ್ಲಿಯೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಚಿಂತನೆ ನಡೆದಿದೆ. ಈ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಬಳಿಕ ಪರಿಣಾಮ ನೋಡಿಕೊಂಡು ಈಶಾನ್ಯ ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತದೆ. ನಂತರ ದೇಶವ್ಯಾಪಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡಲಾಗುವುದು ಎಂದು ಹೇಳಲಾಗಿದೆ.
ಉತ್ತರಾಖಂಡ್ ನಲ್ಲಿ ಕರಡು ಮಸೂದೆ ಸಿದ್ಧಗೊಳಿಸಲಾಗುತ್ತಿದೆ. ನಂತರ ದೇಶವ್ಯಾಪಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲು ಬಿಜೆಪಿಯ ಪ್ರಮುಖ ಸಭೆಗಳಲ್ಲಿ ಚರ್ಚೆ ನಡೆಸಲಾಗಿದೆ. ಮಧ್ಯಪ್ರದೇಶದ ಭೂಪಾಲ್ ನಲ್ಲಿ ಇತ್ತೀಚೆಗೆ ನಡೆದ ಪಕ್ಷದ ಪ್ರಮುಖ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಈ ಕುರಿತಾಗಿ ಚರ್ಚೆ ನಡೆಸಲಾಗಿದೆ. ಮುಂದಿನ ಲೋಕಸಭೆ ಚುನಾವಣೆಗೆ ಮೊದಲೇ ಸಮಾನ ನಾಗರಿಕ ಸಂಹಿತೆ ಜಾರಿಗೆ ಕೇಂದ್ರ ಸರ್ಕಾರ ಒಲವು ತೋರಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.