
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ 7ನೇ ಬಜೆಟ್ ಹಾಗೂ ದಾಖಲೆಯ ಬಜೆಟ್ ಆಗಿದೆ. ಬೆಳಿಗ್ಗೆ 11 ಗಂಟೆಗೆ ಸಂಸತ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಯವ್ಯಯ ಮಂಡಿಸಲಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರಪತಿ ಭವನಕ್ಕೆ ಆಗಮಿಸಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಬಜೆಟ್ ಮಂಡನೆಗೆ ಅನುಮತಿ ಪಡೆದರು. ಈ ವೇಳೆ ದ್ರೌಪದಿ ಮುರ್ಮು ಅವರು, ವಿತ್ತ ಸಚಿವರಿಗೆ ಸಿಹಿ ತಿನ್ನಿಸಿ ಶುಭ ಕೋರೊದರು.
ರಾಷ್ಟ್ರಪತಿ ಭವನದಿಂದ ಆಗಮಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸಂಸತ್ ಗೆ ಆಗಮಿಸಿದ್ದು, ಈ ವೇಳೆ ಬಜೆಟ್ ದಾಖಲೆಗಳ ಪ್ರತಿಗಳನ್ನು ಪ್ರದರ್ಶಿಸಿದರು. ಕೆಲವೇ ಕ್ಷಣಗಳಲ್ಲಿ ಕೇಂದ್ರ ಬಜೆಟ್ ಮಂಡನೆ ಆರಂಭವಾಗಲಿದ್ದು, ಈ ಬಾರಿ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಿವೆ.