ಗೋರಖ್ ಪುರ: ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಗೋರಖ್ ಪುರ ನಗರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ತಮ್ಮ ಚುನಾವಣಾ ಅಫಿಡವಿಟ್ ನಲ್ಲಿ, ಉತ್ತರ ಪ್ರದೇಶದ ಮುಖ್ಯಮಂತ್ರಿ 1.5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿ ಘೋಷಿಸಿದ್ದಾರೆ. ಆದರೆ, ಅವರ ವಿರುದ್ಧ ಯಾವುದೇ ಬಾಕಿ ಇರುವ ಕ್ರಿಮಿನಲ್ ಪ್ರಕರಣದ ಬಗ್ಗೆ ಯಾವುದೇ ಉಲ್ಲೇಖವಿಲ್ಲ.
ಐದು ಬಾರಿ ಲೋಕಸಭಾ ಸಂಸದರಾಗಿರುವ ಯೋಗಿ ಆದಿತ್ಯನಾಥ್ ಅವರು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದು ಇದೇ ಮೊದಲು. 2017 ರಲ್ಲಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾದಾಗ ಅವರು ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸಿರಲಿಲ್ಲ. ವಿಧಾನ ಪರಿಷತ್ತಿನ ಸದಸ್ಯ ಸ್ಥಾನ ಆಯ್ಕೆ ಮಾಡಿಕೊಂಡಿದ್ದರು.
ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ ನಂತರ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿದ್ದಾರೆ ಎಂದು ಆಗಾಗ ಆರೋಪಿಸಿಸುತ್ತಾರೆ.
ಆದರೆ, ಸಿಎಂ ಯೋಗಿ ಆದಿತ್ಯನಾಥ್ ಅವರು ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಇಂದಿನವರೆಗೆ ತಮ್ಮ ವಿರುದ್ಧ ಯಾವುದೇ ಪ್ರಕರಣಗಳಿಲ್ಲ ಎಂದು ಹೇಳಿದ್ದಾರೆ. ನನ್ನ ಮೇಲಿನ ಯಾವುದೇ ಪ್ರಕರಣವನ್ನು ನಾನು ಹಿಂಪಡೆದಿಲ್ಲ. ಮುಲಾಯಂ ಸಿಂಗ್ ಅವರ ಸರ್ಕಾರದ ಅವಧಿಯಲ್ಲಿ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲಾಯಿತು ಎಂದು ಅವರು ಇತ್ತೀಚೆಗೆ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.
ಅಖಿಲೇಶ್ ಆಸ್ತಿಯಲ್ಲಿ ಅಲ್ಪ ಏರಿಕೆ
ಸೋಮವಾರದಂದು ಮಾಜಿ ಸಿಎಂ ಅಖಿಲೇಶ್ ಯಾದವ್ ಅವರು ಮೈನ್ ಪುರಿ ಕರ್ತಾಲ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ತಮ್ಮ ಚುನಾವಣಾ ಅಫಿಡವಿಟ್ ನಲ್ಲಿ ಎಸ್‌ಪಿ ಮುಖ್ಯಸ್ಥರು ತಮ್ಮ ಆಸ್ತಿಯ ನಿವ್ವಳ ಮೌಲ್ಯ 17.22 ಕೋಟಿ ರೂ. ಎಂದು ಹೇಳಿಕೊಂಡಿದ್ದಾರೆ.