ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚುನಾವಣೆಯಲ್ಲಿ ಪರಾಭವಗೊಂಡಿದ್ದು, ಅಧಿಕಾರ ಉಳಿಸಿಕೊಳ್ಳಲು ಅಕ್ರಮ ಮಾರ್ಗ ಅನುಸರಿಸಿದ್ದಾರೆ. ತಮ್ಮ ಬೆಂಬಲಿಗರ ಮೂಲಕ ಹಿಂಸಾಚಾರಕ್ಕೆ ಮುಂದಾಗಿದ್ದಾರೆ. ಆದರೆ, ಪೊಲೀಸರು ಇಂತಹ ಪ್ರಯತ್ನಕ್ಕೆ ತಡೆ ಹಾಕಿದ್ದಾರೆ.
ವಾಷಿಂಗ್ಟನ್ ನಲ್ಲಿ 15 ದಿನಗಳವರೆಗೆ ಎಮರ್ಜೆನ್ಸಿ ವಿಸ್ತರಿಸಲಾಗಿದೆ. ಫೈರಿಂಗ್ ನಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಡೊನಾಲ್ಡ್ ಟ್ರಂಪ್ ಅವರಿಗೆ ನಿಷ್ಠರಾಗಿರುವ ಪ್ರತಿಭಟನಾಕಾರರು ಹಿಂಸಾಚಾರಕ್ಕಿಳಿದಿದ್ದು, ಬುಧವಾರ ಯುಎಸ್ ಕ್ಯಾಪಿಟಲ್ ಗೆ ನುಗ್ಗಿ ಚುನಾಯಿತ ಪ್ರತಿನಿಧಿಗಳಿಗೆ ತಲೆಮರೆಸಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ಮತ ಎಣಿಕೆ ಕೇಂದ್ರಕ್ಕೆ ನುಗ್ಗಿ ಗಲಾಟೆ ಮಾಡಿದ್ದಾರೆ. ಅಮೆರಿಕ ಅಧ್ಯಕ್ಷ ಚುನಾವಣೆಯನ್ನು ರದ್ದುಗೊಳಿಸಲು ಹಿಂಸಾಚಾರಕ್ಕಿಳಿದಿದ್ದು, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆದ ಚುನಾವಣೆಯಲ್ಲಿ ಜೋ ಬೈಡೆನ್ ವಿಜೇತರಾಗಿದ್ದು, ಅವರ ಗೆಲುವನ್ನು ತಡೆದು ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ಅವರೇ ಮುಂದುವರೆಯುವಂತೆ ಮಾಡಲು ವಿಫಲ ಪ್ರಯತ್ನ ನಡೆಸಲಾಗಿದೆ.
ಯುಎಸ್ ಕ್ಯಾಪಿಟಲ್ ಗೆ ನುಗ್ಗಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರನ್ನು ಹತ್ತಿಕ್ಕಲು ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಮತ್ತು ಫೆಡರಲ್ ಪೊಲೀಸರನ್ನು ನಿಯೋಜಿಸಲಾಗಿದೆ. ವಾಷಿಂಗ್ಟನ್ ಮೇಯರ್ ಕರ್ಫ್ಯೂ ವಿಧಿಸಿದ್ದು, ಈ ವೇಳೆ ನಡೆದ ಫೈರಿಂಗ್ ನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ನಂತರ ಬೆಳವಣಿಗೆಯಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಬುಧವಾರ ಬೆಳಗ್ಗೆ ಶ್ವೇತಭವನದ ಹೊರಗೆ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಟ್ರಂಪ್, ಯುಎಸ್ ಕ್ಯಾಪಿಟಲ್ಸ್ ವರೆಗೆ ಪ್ರತಿಭಟನೆ ನಡೆಸಲು ತಿಳಿಸಿದ್ದು, ಆದರೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಡೊನಾಲ್ಡ್ ಟ್ರಂಪ್ ಅವರ ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣದ ಖಾತೆಗಳನ್ನು ಬಂದ್ ಮಾಡಲಾಗಿದ್ದು, ಅನೇಕ ಪೋಸ್ಟ್ ಗಳನ್ನು ಡಿಲೀಟ್ ಮಾಡಲಾಗಿದೆ. ಚುನಾಯಿತ ಅಧ್ಯಕ್ಷ ಜೋ ಬೈಡೆನ್, ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸೇರಿದಂತೆ ಹಲವು ನಾಯಕರು ಟ್ರಂಪ್ ಬೆಂಬಲಿಗರ ವರ್ತನೆಯನ್ನು ಖಂಡಿಸಿದ್ದಾರೆ. ಅಧಿಕಾರದಲ್ಲಿ ಮುಂದುವರೆಯಲು ವಿಫಲ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.