ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನ ಹಿನ್ನೆಲೆಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.
ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಎರಡು ದಿನ ಶೋಕಾಚರಣೆ ಘೋಷಿಸಲಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಮುಂದೂಡಿದೆ.
ಈ ಕುರಿತು ಯುಪಿ ಬಿಜೆಪಿ ರಾಜ್ಯ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಮಾಹಿತಿ ನೀಡಿದ್ದು, ಲತಾ ಮಂಗೇಶ್ಕರ್ ನಿಧನದಿಂದಾಗಿ ನಾವು ಲೋಕ ಕಲ್ಯಾಣ ಸಂಕಲ್ಪ ಪತ್ರ ಚುನಾವಣಾ ಪ್ರಣಾಳಿಕೆ ಬಿಡುಗಡೆಯನ್ನು ಮುಂದೂಡುತ್ತಿದ್ದೇವೆ. ಪ್ರಣಾಳಿಕೆ ಬಿಡುಗಡೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಗಾಯಕಿ ಲತಾ ಮಗೇಶ್ಕರ್ ನಿಧನ ಹಿನ್ನೆಲೆಯಲ್ಲಿ ಗೋವಾ ಬಿಜೆಪಿ, ಪ್ರಧಾನಿ ಮೋದಿ ಅವರ ವರ್ಚುವಲ್ ರ್ಯಾಲಿ ಹಾಗೂ ಪಕ್ಷದ ಪ್ರಮುಖ ಕಾರ್ಯಕ್ರಮಗಳನ್ನು ಕೂಡ ರದ್ದುಗೊಳಿಸಿದೆ ಎಂದು ಸಿಎಂ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.