ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟ ಭಾಗಗಳಲ್ಲಿ ಭೂಮಿ ಕಂಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಸ್ಪಷ್ಟನೆ ನೀಡಿದ್ದಾರೆ.
ಭೂಕಂಪನದ ಯಾವುದೇ ಸಂದೇಶ ರಿಕ್ಟರ್ ಮಾಪಕದಲ್ಲಿ ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜನತೆ ಭಯಪಡುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಶಿರಸಿ, ಯಲ್ಲಾಪುರ, ಸಿದ್ದಾಪುರ, ಕುಮಟಾ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವವಾಗಿತ್ತು. ಬೆಳಿಗ್ಗೆ ಭೂಮಿ ಕಂಪಿಸಿದ ಅನುಭವವಾಗಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದರು. ಆದರೆ ತಜ್ಞರ ಪ್ರಕಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕಂಪನವಾಗಿಲ್ಲ. ಜಿಲ್ಲೆಯ ಜನ ನಿರಾತಂಕವಾಗಿರುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.