ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೆಡೆ ಗುಡ್ಡ ಕುಸಿತ, ರಸ್ತೆ ಸಂಪರ್ಕ ಕಡಿತಗೊಂಡಿದ್ದರೆ ಮತ್ತೊಂದೆಡೆ ಗ್ರಾಮಕ್ಕೆ ಗ್ರಾಮವೇ ಮುಳುಗಡೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ಕುಟುಂಬಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯ ಅಂಕೋಲಾ ತಾಲೂಕಿನ 5 ಗ್ರಾಮಗಳು ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿವೆ. ಬಿಳಿಹೊಂಗಿ, ಮಂಜಗುಣಿ, ಪಣಸಗೊಳಿ, ಹೊನ್ನೆಬೈಲು ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿದ್ದು, ಎಲ್ಲಿ ನೋಡಿದರಲ್ಲಿ ನೀರು ತುಂಬಿದ್ದು ನದಿಯಂತೆ ಕಂಡುಬರುತ್ತಿವೆ. ತೋಟ, ಗದ್ದೆ, ಮನೆಗಳಲ್ಲಿ ನೀರು ನಿಂತಿದೆ.
ಹೊನ್ನೆಬೈಲು ಗ್ರಾಮ ಮುಳುಗಡೆಯಾಗಿದ್ದು, 35ಕ್ಕೂ ಹೆಚ್ಚು ಮನೆಗಳಿಗೆ ನೀರು ನಿಗ್ಗಿ ಅವಾಂತರ ಸೃಷ್ಟಿಯಾಗಿದೆ. ಗ್ರಾಮಗಳು ಜಲಾವೃತವಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಸರ್ಕಾರಿ ಶಾಲೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದಿದೆ.
ಬಿಳಿಹೊಂಗಿ, ಹೊನ್ನೆಬೈಲು, ಶಿಂಗನಮಕ್ಕಿ, ಮಂಜಗುಣಿ ಸರ್ಕಾರಿ ಶಾಲೆಗಳಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, ಮುಂಜಾಗೃತಾ ಕ್ರಮವಾಗಿ ಗ್ರಾಮಸ್ಥರನ್ನು ಕಾಳಜಿ ಕೇಂದ್ರಕ್ಕೆ ತೆರಳುವಂತೆ ಸೂಚಿಸಲಾಗಿದೆ. ಆದರೆ ಗ್ರಾಮಸ್ಥರು ಕಾಳಜಿಕೇಂದ್ರಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದು, ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಲು ಮುಂದಾಗಿದ್ದಾರೆ.