ಕಾರವಾರ: ಮುಂಡಗೋಡ ಉದ್ಯಮಿ ಅಪಹರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರು ಆರೋಪಿಗಳನ್ನು ಬಂಧಿಸಲು ಹೋಗಿದ್ದ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಇಬ್ಬರನ್ನು ಬಂಧಿಸಿದ್ದಾರೆ.
ಜಮೀರ್ ಅಹ್ಮದ್ ದರ್ಗಾವಾಲೆ ಎಂಬ ಉದ್ಯಮಿಯನ್ನು ಅಪಹರಿಸಿದ್ದ ಆರೋಪಿಗಳನ್ನು ಬಂಧಿಸಲು ಹೋಗಿದ ವೇಳೆ ಈ ಘಟನೆ ನಡೆದಿದೆ. ಸದ್ಯ ಆರೋಪಿಗಳಾದ ರಹೀಮ್ ಅಲ್ಲಾವುದ್ದೀನ್ ಹಾಗೂ ಅಜಯ್ ಮಡ್ಲಿ ಬಂಧಿತ ಆರೋಪಿಗಳಾಗಿದ್ದು, ಅವರ ಕಾಲಿಗೆ ಗುಂಡೇಟಿನ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಗಳ ಬಂಧನ ವೇಳೆ ಮುಂಡಗೋಡ ಠಾಣೆಯ ಸಿಪಿಐ, ಪಿಎಸ್ ಐ ಹಾಗೂ ಓರ್ವ ಕಾನ್ಸ್ ಟೇಬಲ್ ಗಳಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉದ್ಯಮಿ ಜಮೀರ್ ರನ್ನು ಅಪಹರಿಸಿದ್ದ ದುಷ್ಕರ್ಮಿಗಳು 35 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ವಿಷಯ ತಿಳಿಯುತ್ತಿದ್ದಂತೆ ಕಾರವಾರ ಉತ್ತರ ಕನ್ನಡ ಜಿಲ್ಲಾ ಎಸ್ ಪಿ ನಾರಾಯಣ್ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚನೆ ಮಡಿದ್ದರು. ಈ ನಡುವೆ ಆರೋಪಿಗಳು ಗದಗ ಬಳಿ ಉದ್ಯಮಿಯನ್ನು ಬಿಟ್ಟು ಎಸ್ಕೇಪ್ ಆಗಿದ್ದರು. ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿಗೆ ಯತ್ನಿಸಲಾಗಿದ್ದು, ಪೊಲೀಸರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಈವರೆಗೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.