
ಕಾಸರಕೋಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಟೊಂಕಾದಲ್ಲಿ ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ವಾಣಿಜ್ಯ ಬಂದರು ನಿರ್ಮಾಣಕ್ಕಾಗಿ ಅಧಿಕಾರಿಗಳು ಬಿಗಿ ಪೊಲೀಸ್ ಭದ್ರತೆಯಲ್ಲಿ ಒಂದೆಡೆ ಸರ್ವೆ ಕಾರ್ಯ ಆರಂಭವಿಸಿದ್ದಾರೆ. ಬಂದರು ನಿರ್ಮಾಣಕ್ಕೆ ಈ ಭಾಗದ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಂದರು ಸರ್ವೆ ಕಾರ್ಯ ವಿರೋಧಿಸಿ ನಿನ್ನೆ ಅಂಕೋಲಾದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಇಂದು ಹೊನ್ನಾವರದ ಕಾಸರಕೋಡದಲ್ಲಿ ಸ್ಥಳೀಯರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಪ್ರತಿಭಟನೆಯಲ್ಲಿ ಸಾರ್ವಜನಿಕರು, ಗ್ರಾಮಸ್ಥರು, ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ಕಾಸರಕೋಡ ಗ್ರಾಮದಲ್ಲಿ ಸಮುದ್ರಗುಂಟ ಇರುವ ರಸ್ತೆ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿರುವ ಸ್ಥಳೀಯರು, ವಿದ್ಯಾರ್ಥಿಗಳು ಸರ್ವೆ ಕಾರ್ಯ ಸ್ಥಗಿತಗೊಳಿಸುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಪೊಲೀಸರು ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
ಬಂದರು ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವೇಳೆ ಹೋರಾಟದಲ್ಲಿ ಭಾಗಿಯಾಗಿದ್ದ ಓರ್ವ ಮಹಿಳೆ ಸರ್ವೆ ಕಾರ್ಯ ನಿಲ್ಲಿಸುವಂತೆ ಒತ್ತಾಯಿಸಿ ಏಕಾಏಕಿ ಸಮುದ್ರಕ್ಕೆ ಹಾರಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ಹಾಗೂ ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದಾರೆ. ನೀರಿಗೆ ಬಿದ್ದು ಅಸ್ವಸ್ಥಗೊಂಡಿರುವ ಮಹಿಳೆಯನ್ನು ಆಸ್ಪತೆಗೆ ದಾಖಲಿಸಲಾಗಿದೆ.
ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದಂತೆ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಹೋರಾಟಗಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.