ಕೋಲಾರ: ವಿಧಾನ ಪರಿಷತ್ ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ವಿ.ಆರ್. ಸುದರ್ಶನ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ವಿ.ಆರ್. ಸುದರ್ಶನ್ ಕೋಲಾರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಸಿದ್ದರಾಮಯ್ಯ ಸ್ಪರ್ಧಿಸುವುದಾದರೆ ಅವರನ್ನು ಬೆಂಬಲಿಸುತ್ತೇನೆ. ಒಂದು ವೇಳೆ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ತಮಗೆ ಟಿಕೆಟ್ ನೀಡುವಂತೆ ಅವರು ನಾಯಕರ ಬಳಿ ಬೇಡಿಕೆ ಇಟ್ಟಿದ್ದರು. ಆದರೆ, ಇಂದು ಬಿಡುಗಡೆಯಾದ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ಕೋಲಾರ ಕ್ಷೇತ್ರಕ್ಕೆ ಕೊತ್ತನೂರು ಮಂಜುನಾಥ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಇದರಿಂದ ಬೇಸರಗೊಂಡು ವಿ.ಆರ್. ಸುದರ್ಶನ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿಯೂ ಅವರಿಗೆ ಕೋಲಾರ ಕ್ಷೇತ್ರದ ಟಿಕೆಟ್ ಕೈತಪ್ಪಿತ್ತು, ಆಗ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರು. ಇತ್ತೀಚೆಗೆ ಕಾಂಗ್ರೆಸ್ ಮುಖ್ಯ ವಕ್ತಾರ ಹುದ್ದೆಗೂ ರಾಜೀನಾಮೆ ನೀಡಿದ್ದರು. ಇದೀಗ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.