ಬೆಂಗಳೂರು: ಬಹುಮಹಡಿ ಯೋಜನೆಯ ಕಾಮಗಾರಿ ಶೀಘ್ರದಲ್ಲಿ ಮುಗಿಯಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ ಅನುಷ್ಠಾನ ಕುರಿತಂತೆ ಇಂದು ವಿಧಾನಸೌಧದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಸೋಮಣ್ಣ, ಬೆಂಗಳೂರಿನಲ್ಲಿ ಸ್ವಂತ ಸೂರು ಹೊಂದುವ ಆಸೆಗೆ ಈ ಯೋಜನೆ ಇಂಬು ನೀಡಲಿದೆ. ಈ ಯೋಜನೆಯ ವ್ಯಾಪ್ತಿಯನ್ನು ಬಿಡಿಎ ದಿಂದ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ವಿಸ್ತರಿಸಲಾಗಿದೆ. ಬೆಂಗಳೂರು ಬಹುಮಹಡಿ ಯೋಜನೆಯ ಫಲಾನುಭವಿಗಳ ವಾರ್ಷಿಕ ಆದಾಯದ ಮಿತಿಯನ್ನು 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಅಲ್ಲದೇ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫಲಾನುಭವಿಗಳಿಗೆ ಶೇ.50 ರಷ್ಟು ಮನೆಗಳನ್ನು ಮೀಸಲಿರಿಸಲಾಗಿದೆ. ಈಗಾಗಲೇ 42,988 ಮನೆಗಳ ಕಾಮಗಾರಿಯನ್ನು ಆರಂಭಿಸಲಾಗಿದೆ. ಇನ್ನು, ಬೆಂಗಳೂರು ಬಹುಮಹಡಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 21 ರ ವರೆಗೆ ವಿಸ್ತರಿಸಲಾಗಿದೆ. ಈಗಾಗಲೇ ನಗರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಮಗಾರಿ ಭರದಿಂದ ಸಾಗಿದ್ದು, ಆದಷ್ಟು ಬೇಗೆ ಫಲಾನುಭವಿಗಳಿಗೆ ಮನೆಗಳನ್ನು ಹಸ್ತಾಂತರಿಸಲಾಗುವುದು. ಅವಶ್ಯಕತೆ ಇರುವವರಿಗೆ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಮಾತನಾಡಿ, ಬೆಂಗಳೂರು ಅಂತಾರಾಷ್ಟ್ರೀಯ ನಗರವಾಗಲು ಕಾರ್ಮಿಕ ವರ್ಗದ ಕೊಡುಗೆ ಹೆಚ್ಚಿನ ಪ್ರಮಾಣದಲ್ಲಿದೆ. ಹೀಗಾಗಿ ಈ ವಸತಿ ಯೋಜನೆಯ ಹೆಚ್ಚಿನ ಭಾಗ ಈ ವರ್ಗಕ್ಕೆ ಸೇರಬೇಕು. ಇತರ ಇಲಾಖೆಗಳ ಸಹಕಾರದೊಂದಿಗೆ ಕೈಗೆಟುಕುವ ದರದಲ್ಲಿ ಶೀಘ್ರವಾಗಿ ಮನೆಗಳ ಹಸ್ತಾಂತರ ನಡೆಯಲಿದೆ. ಈ ನಿಟ್ಟಿನಲ್ಲಿ ವಿ.ಸೋಮಣ್ಣ ಕಾರ್ಯಪ್ರವೃತ್ತರಾಗಿದ್ದಾರೆ ಎಂದರು.
ಸಭೆಯಲ್ಲಿ ಸಚಿವರಾದ ಮುನಿರತ್ನ, ಎಸ್ ಟಿ ಸೋಮಶೇಖರ್, ಮುನಿರತ್ನ, ಬಿ.ಎ.ಬಸವರಾಜ, ಕೆ.ಗೋಪಾಲಯ್ಯ, ಶಾಸಕರಾದ ಎಸ್.ಆರ್.ವಿಶ್ವನಾಥ್, ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.