ಬೆಂಗಳೂರು: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಮುಂದಿನ ನಾಲ್ಕು ತಿಂಗಳಲ್ಲಿ ರೈಲ್ವೆ ಇಲಾಖೆಯಲ್ಲಿ 60,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿದ್ದ ‘ಹೆಸರಾಯಿತು ಕರ್ನಾಟಕ-50ರ ಸಂಭ್ರಮ’ ಮತ್ತು ಪ್ರತಿಜ್ಞಾ ಸ್ವೀಕಾರ ಸಮಾವೇಶದಲ್ಲಿ ಅವರು ಮಾತನಾಡಿದರು.
ಈ ಮೊದಲು ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ರೈಲ್ವೆ ಇಲಾಖೆ ಪರೀಕ್ಷೆ ನಡೆಯುತ್ತಿದ್ದವು. ನಾನು ಸಚಿವನಾದ ಬಳಿಕ ಕನ್ನಡ ಸೇರಿ ಪ್ರಾದೇಶಿಕ ಭಾಷೆಗಳಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರ ನಿರಂತರ ಹೋರಾಟವೂ ಕಾರಣವಾಗಿದೆ. ರೈಲ್ವೇ ನೇಮಕಾತಿ ಪರೀಕ್ಷೆ ಪ್ರಾದೇಶಿಕ ಭಾಷೆಗಳಲ್ಲಿಯೂ ನಡೆಯಲಿವೆ. ಇದನ್ನು ಬಳಸಿಕೊಂಡು ಶೇಕಡ 20ರಿಂದ 25ರಷ್ಟು ಕನ್ನಡಿಗರು ಆಯ್ಕೆಯಾದರೆ ಹೋರಾಟದ ಶ್ರಮ ಸಾರ್ಥಕವಾಗುತ್ತದೆ ಎಂದು ಹೇಳಿದ್ದಾರೆ.