alex Certify BREAKING: ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿಧಿವಶ

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ ರಾಜಕೀಯ ನಿವೃತ್ತಿ ಘೋಷಿಸಿದ್ದ ಶ್ರೀನಿವಾಸ್ ಪ್ರಸಾದ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಚಾಮರಾಜನಗರದಿಂದ ಆರು ಬಾರಿ ಸಂಸದರಾಗಿ, ನಂಜನಗೂಡು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಶ್ರೀನಿವಾಸ್ ಪ್ರಸಾದ್ ಅವರಿಗೆ 76 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆಯ ಮಣಿಪಾಲ ಆಸ್ಪತ್ರೆಯಲ್ಲಿ ರಾತ್ರಿ 1.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಮೂತ್ರಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೂರು ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರು 1974ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದ್ದರು. ಕೃಷ್ಣರಾಜ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಕಂಡಿದ್ದರು. 1978 ರಲ್ಲಿ ಟಿ. ನರಸೀಪುರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರು. 1980 ರಲ್ಲಿ ಚಾಮರಾಜನಗರ ಲೋಕಸಭಾ ಅಭ್ಯರ್ಥಿಯಾಗಿ ಜಯಗಳಿಸಿದ್ದರು. 1984, 1989, 1991 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. 1999 ರಲ್ಲಿ ಜೆಡಿಯು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಅವರು ವಾಜಪೇಯಿ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2008, 2013ರಲ್ಲಿ ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿ 2013 ರಿಂದ 17ರ ವರೆಗೆ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. 2017ರಲ್ಲಿ ಸಚಿವ ಸ್ಥಾನದಿಂದ ಸಿದ್ದರಾಮಯ್ಯ ಕೈ ಬಿಟ್ಟಿದ್ದಕ್ಕೆ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿ ಉಪಚುನಾವಣೆಯಲ್ಲಿ ಸೋಲು ಕಂಡಿದ್ದರು. 2019ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಯಗಳಿಸಿ ಮೊದಲ ಬಾರಿಗೆ ಕಮಲ ಅರಳಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...