
ಗುಜರಾತ್‌ನ ವಡೋದರಾ ನಗರದ ಹೊರವಲಯದಲ್ಲಿರುವ ಹರ್ನಿ ಸರೋವರದಲ್ಲಿ ಗುರುವಾರ ದೋಣಿ ಉರುಳಿ ಬಿದ್ದ ಪರಿಣಾಮ ಕನಿಷ್ಠ 16 ಶಾಲಾ ಮಕ್ಕಳು ಸಾವನ್ನಪ್ಪಿದ್ದಾರೆ. ದೋಣಿಯಲ್ಲಿ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು, ಅವರು ವಿಹಾರಕ್ಕೆ ತೆರಳಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಉಳಿದ ವಿದ್ಯಾರ್ಥಿಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.
ಅಪಘಾತದ ನಂತರ, ವಡೋದರಾದ ಹರ್ನಿ ಸರೋವರದಲ್ಲಿ ದೋಣಿ ಮುಳುಗಿ ಪ್ರಾಣಹಾನಿಯಿಂದ ಸಂತ್ರಸ್ತರಾದವರಿಗೆ ಪ್ರಧಾನ ಮಂತ್ರಿ ಕಚೇರಿ 2 ಲಕ್ಷ ಪರಿಹಾರ ಘೋಷಿಸಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಸ್ಥಳೀಯ ಆಡಳಿತ ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ಗಳನ್ನು ಮೃತರ ಮುಂದಿನ ಸಂಬಂಧಿಕರಿಗೆ ನೀಡಲಾಗುತ್ತದೆ. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು.
ಗುಜರಾತ್ ಶಿಕ್ಷಣ ಸಚಿವ ಕುಬೇರ್ ದಿಂಡೋರ್, ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಸರೋವರಕ್ಕೆ ಉರುಳಿ ಹಲವಾರು ಮಕ್ಕಳು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಇತರ ಏಜೆನ್ಸಿಗಳೊಂದಿಗೆ ಕೆಲಸದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ತ್ವರಿತ ಕ್ರಮದ ಭರವಸೆ ನೀಡಿದ ರಾಜ್ಯ ಆರೋಗ್ಯ ಸಚಿವ ಋಷಿಕೇಶ್ ಪಟೇಲ್, ಇದು ಅತ್ಯಂತ ದುಃಖಕರ ಘಟನೆಯಾಗಿದೆ. ಮೃತರ ಕುಟುಂಬಗಳಿಗೆ ಸಂತಾಪ. ಈ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. 10 ಜನರನ್ನು ರಕ್ಷಿಸಲಾಗಿದೆ. ಸರ್ಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದರು.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪುವ ಮೊದಲು ಸ್ಥಳೀಯ ನಿವಾಸಿಗಳು ಕೆಲವು ಮಕ್ಕಳನ್ನು ರಕ್ಷಿಸಿದ್ದಾರೆ. 14 ಮಕ್ಕಳು, ಇಬ್ಬರು ಶಿಕ್ಷಕರು ಮೃತಪಟ್ಟಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಖಾಸಗಿ ಶಾಲೆ ಮಕ್ಕಳು ಪ್ರವಾಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ.