ಬೆಂಗಳೂರು: ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಬೆಂಗಳೂರಿನ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ತಮಿಳುನಾಡಿನ ದೇವಸ್ಥಾನಕ್ಕೆ ಭೇಟಿ ಹಾಗೂ ವಿಶೇಶ ಪೂಜೆ ಬಗ್ಗೆ ಪ್ರತಿಕ್ರಿಯಿಸಿ, ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ ನಂಬಿಕೆಯಿದೆ. ಇದರಲ್ಲಿ ಯಾವುದೇ ವಿಶೇಷವಿಲ್ಲ. ನಾನು ಪ್ರತಿದಿನ ದೇವರಿಗೆ ನಮಸ್ಕಾರ ಮಾಡದೇ ಮನೆಯಿಂದ ಹೊರಗೆ ಬರುವುದಿಲ್ಲ. ನಾನು ಯಾವ ಶಕ್ತಿಯನ್ನು ನಂಬುತ್ತೇನೆಯೊ ಅದರ ಮೇಲೆ ಭಕ್ತಿ, ಪ್ರೀತಿ ಇದ್ದೇ ಇರುತ್ತದೆ ಎಂದು ಹೇಳಿದರು.
ಶತ್ರುಗಳ ನಾಶಕ್ಕೆ ಶಿವಕುಮಾರ್ ಹೋಮ ಮಾಡಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ನಾನು ಪ್ರತಿ ದಿನವೂ ನನಗೆ ಒಳ್ಳೆಯದಾಗಲಿ ಎಂದು ಪೂಜೆ ಮಾಡುತ್ತಿರುತ್ತೇನೆ. ನನಗೆ ಯಾರ್ಯಾರು ತೊಂದರೆ ಕೊಡುತ್ತಾರೆಯೋ ಅವರಿಂದ ನನಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದರು.
ಮಾಧ್ಯಮಗಳು ಸಹ ನನಗೆ ಬೇಕಾದಷ್ಟು ತೊಂದರೆ ಕೊಡುತ್ತಿರುತ್ತೀರಿ. ಇಲ್ಲದೇ ಇರುವ ಹೊಸ ಸುದ್ದಿಗಳನ್ನು ಸೃಷ್ಟಿ ಮಾಡುತ್ತಾ ಇರುತ್ತೀರಿ. ಅದಕ್ಕಾಗಿ ನಿಮ್ಮಿಂದಲೂ ನಮಗೆ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿರುತ್ತೇನೆ ಎಂದು ಹೇಳಿದರು.
ವೆಂಕಟೇಶ್ವರನ ಜೊತೆ ಲಕ್ಷ್ಮಿ ಸೇರಿದಂತೆ ವೈಕುಂಠ ಏಕಾದಶಿಯ ದಿನದಂದು ಈ ರಾಜ್ಯದ ಎಲ್ಲರ ಮನೆಯಲ್ಲೂ ಐಶ್ವರ್ಯ ಹೆಚ್ಚಾಗಲಿ ಎಂದು ಪ್ರಾರ್ಥಿಸುತ್ತೇನೆ. ಇದು ನಮ್ಮ ನಂಬಿಕೆ, ಆಚಾರ ವಿಚಾರ. ಧರ್ಮೋ ರಕ್ಷತಿ ರಕ್ಷಿತಃ ಅಂದರೆ ಧರ್ಮವನ್ನು ನಾವು ಉಳಿಸಿದರೆ ಧರ್ಮವು ನಮ್ಮನ್ನು ಉಳಿಸುತ್ತದೆ. ವಿಷ್ಣುವಿನ ಸ್ವರೂಪವಾದ ವೆಂಕಟೇಶ್ವರನ ದರ್ಶನವನ್ನು ರಾಜ್ಯದ ನಾನಾ ಕಡೆಗಳಲ್ಲಿ ಜನರು ಮಾಡುತ್ತಿದ್ದಾರೆ. ಎಲ್ಲರಿಗೂ ದೇವರ ಅನುಗ್ರಹ ದೊರೆಯಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.