ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ನೀಡಲಾಗಿದೆ ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಚಿವ ನಾಗೇಂದ್ರ ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ನೀಡಲಾಗಿದೆ. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಬ್ಯಾಂಕ್ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿರುವ ಸಂಶಯವಿದೆ, ಪ್ರಕರಣದ ಬಗ್ಗೆ ಸಿಎಂ ಕೂಡ ಮಾಹಿತಿ ಪಡೆದುಕೊಂಡಿದ್ದಾರೆ . ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ. ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಆತ್ಮಹತ್ಯೆ ಮಾಡಿಕೊಂಡವರು. ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ 187 ಕೋಟಿ ಹಗರಣಕ್ಕೆ ಬೇಸತ್ತು, ತನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಕೆಲ ಅಧಿಕಾರಿಗಳ ಹೆಸರು ಬರೆದಿಟ್ಟು ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಬೃಹತ್ ಹಗರಣ ನಡೆದಿದೆ. ಅದರಲ್ಲಿ 85 ಕೋಟಿ ರೂ. ಹಣವನ್ನು ಕಾನೂನು ಬಾಹಿರವಾಗಿ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ. ಅಕೌಂಟೆಂಟ್ ಹಾಗೂ ಅಧಿಕಾರಿಗಳು ಮಾಡಿದ ತಪ್ಪನ್ನು ನನ್ನ ಮೇಲೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.