ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಸಾಯಿ ತೇಜ ಮತ್ತು ಇನ್ನೊಬ್ಬನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಇವರ ಬಳಿ ಹಣಕಾಸು ವರ್ಗಾವಣೆ ಸಂಬಂಧ ಕೆಲವು ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ.
ಚಂದ್ರಶೇಖರನ್ ಬರೆದಿದ್ದ ಮರಣ ಪತ್ರದಲ್ಲಿ ಸಾಯಿ ತೇಜ ಹೆಸರು ಉಲ್ಲೇಖಿಸಿದ್ದು, ಈ ಹಿನ್ನೆಲೆಯಲ್ಲಿ ಸಾಯಿ ತೇಜ ಸೇರಿ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಳಿಕ ಅವರನ್ನು ವಶಕ್ಕೆ ಪಡೆದು ಎಸ್ಎಂಟಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ನಿಗಮದ ಹಣ ಅಕ್ರಮ ವರ್ಗಾವಣೆ ಸಂಬಂಧ ಮಹತ್ವದ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಸೇರಿ 8 ಆರೋಪಿಗಳನ್ನು ಬಂಧಿಸಲಾಗಿದೆ. 13 ಕೋಟಿ ರೂ.ಗೂ ಅಧಿಕ ಹಣ ಜಪ್ತಿ ಮಾಡಲಾಗಿದೆ.