
ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಇಂದಿನಿಂದ ವಾಲ್ಮೀಕಿ ಜಾತ್ರೆ ಆರಂಭವಾಗಲಿದೆ. ಐದನೇ ವರ್ಷದ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇಂದಿನಿಂದ ಚಾಲನೆ ದೊರೆಯಲಿದೆ.
ಜನಜಾಗೃತಿ ಜಾತ್ರಾ ಮಹೋತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ವಾಲ್ಮೀಕಿ ಜಾತ್ರೆಯ ಅಂಗವಾಗಿ ಇಂದು ಧರ್ಮ ಸಭೆ, ಉದ್ಯೋಗ ಮೇಳ ನಡೆಯಲಿದ್ದು, ಉದ್ಯೋಗ ಮೇಳಕ್ಕೆ ಸಚಿವ ಮುರುಗೇಶ್ ನಿರಾಣಿ ಚಾಲನೆ ನೀಡಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ವಿಜಯ ಸ್ಮರಣ ಸಂಪುಟ ಬಿಡುಗಡೆ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೊ. ರಂಗರಾಜ ವನದುರ್ಗ ಅವರಿಗೆ ವಾಲ್ಮೀಕಿ ರತ್ನ, ಆನಂದ್ ಸಿಂಗ್ ಅವರಿಗೆ ಮದಕರಿ ನಾಯಕ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜಾತ್ರೆಗಾಗಿ ಎರಡು ಕೋಟಿ ರೂ. ವೆಚ್ಚದಲ್ಲಿ ಭವ್ಯ ರಥ ನಿರ್ಮಿಸಲಾಗಿದ್ದು, ಶ್ರೀ ಪ್ರಸನ್ನಾನಂದ ಸ್ವಾಮೀಜಿ ರಥಕ್ಕೆ ಚಾಲನೆ ನೀಡಲಿದ್ದಾರೆ.