ಬೆಂಗಳೂರು: ವಾಲ್ಮೀಕಿ ಜನಾಂಗದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ರಚಿಸಲಾಗುವುದು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ವಿವಿಧ ಸಂಘ-ಸಂಸ್ಥೆಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ಪರಿಶಿಷ್ಟ ಪಂಗಡದ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಹಲವು ಬೇಡಿಕೆಗಳಿದ್ದು, ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡುವುದು ಕೂಡ ಬೇಡಿಕೆಗಳಲ್ಲಿ ಒಂದಾಗಿದೆ. ಮುಖ್ಯಮಂತ್ರಿಗಳು ಕೂಡ ಈ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆ ಸಿಎಂ ಜತೆ ಸಮಾಲೋಚನೆ ನಡೆಸಲಾಗುವುದು. ಅ. 28 ರಂದು ರಾಜ್ಯಾದ್ಯಂತ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.