alex Certify BIG NEWS: ರಾಜ್ಯಾದ್ಯಂತ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವದ ಅರ್ಥಪೂರ್ಣ ಆಚರಣೆಗೆ ವರ್ಷವಿಡೀ ವಿವಿಧ ಕಾರ್ಯಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಾದ್ಯಂತ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವದ ಅರ್ಥಪೂರ್ಣ ಆಚರಣೆಗೆ ವರ್ಷವಿಡೀ ವಿವಿಧ ಕಾರ್ಯಕ್ರಮ

ಬೆಳಗಾವಿ: ಮಹಾತ್ಮಾ‌ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924 ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ಷವಿಡೀ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಹೆಚ್.ಕೆ.ಪಾಟೀಲ ತಿಳಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ ಜರುಗಿದ ಶತಮಾನೋತ್ಸವ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶತಮಾನೋತ್ಸವ ಆಚರಣೆ ಬರೀ ಬೆಳಗಾವಿ ಕೇಂದ್ರೀಕೃತವಾಗಿರುವುದಿಲ್ಲ; ಪ್ರತಿಯೊಂದು ಕಾರ್ಯಕ್ರಮವು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ಅಧಿವೇಶನ ಹಾಗೂ ಗಾಂಧೀಜಿಯವರ ಜೀವನ ಸಾಧನೆ ಕುರಿತು ದೊಡ್ಡ ಪ್ರಮಾಣದಲ್ಲಿ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗುವುದು. ಎಲ್ಲ ವಿವಿ ಗಳಲ್ಲಿ ಗಾಂಧಿ ಅಧ್ಯಯನ ಕೇಂದ್ರ ಆರಂಭಿಸಬೇಕಿದೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ಪೂರ್ಣಗೊಳಿಸಬೇಕಿದೆ ಎಂದರು.

ರಚನಾತ್ಮಕ ಕಾರ್ಯಕ್ರಮ ಆಯೋಜನೆ:

ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮ ಆಯೋಜಿಸಲು ಗಾಂಧೀವಾದಿಗಳು, ಹಿರಿಯರ ಜತೆ ಚರ್ಚಿಸಿ ಅಧಿವೇಶನದ ಇತಿಹಾಸ ಮರುಸೃಷ್ಟಿ ಮತ್ತು ಮೆಲುಕು ಹಾಕಲು ಶತಮಾನೋತ್ಸವ ಆಚರಣೆ ಮಾಡಲಾಗುವುದು ಎಂದು ಹೆಚ್.ಕೆ. ಪಾಟೀಲ ತಿಳಿಸಿದರು.

ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಿ, ವಿಸ್ತೃತವಾಗಿ ಚರ್ಚಿಸಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು.

ಅಕ್ಟೋಬರ್ 2 ರಿಂದ ಒಂದು ವರ್ಷಗಳ ಕಾಲ ಶತಮಾನೋತ್ಸವ ವರ್ಷಾಚರಣೆ. ಅಂತರರಾಷ್ಟೀಯ ಮಹತ್ವ ಪಡೆಯಲು ವಿಧಾನಮಂಡಳ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಸಲು ಉದ್ಧೇಶಿಸಲಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಹಾಗೂ ಶತಮಾನೋತ್ಸವ ಸಮಿತಿಯ ಗೌರವ ಅಧ್ಯಕ್ಷ ವೀರಪ್ಪ ಮೊಯ್ಲಿ ಅವರು, ಶತಮಾನೋತ್ಸವ ಸ್ಮರಣೀಯವಾಗಿಸಲು ಶತಮಾನೋತ್ಸವ ಉದ್ಯಾನ ಮತ್ತು ಭವನ‌ ನಿರ್ಮಾಣ ಮಾಡಬೇಕಿದೆ. ಗಾಂಧಿ ಪುತ್ಥಳಿ ನಿರ್ಮಾಣ, ಅಧಿವೇಶನ ಸ್ಥಳದಲ್ಲಿ ಗಾಂಧಿ ಸ್ಮಾರಕ; ಛಾಯಾಚಿತ್ರ, ವಸ್ತುಪ್ರದರ್ಶನ, ಖಾಯಂ ಮ್ಯೂಸಿಯಂ ಸ್ಥಾಪಿಸಬೇಕು ಎಂದು ತಿಳಿಸಿದರು.

ಶತಮಾನೋತ್ಸವ ಸಮಿತಿಯ ಸಂಚಾಲಕ, ವಿಧಾನಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ ಅವರು, ಅಧಿವೇಶನದ ಶತಮಾನೋತ್ಸವವು ಒಂದು ವರ್ಷದ ಕಾರ್ಯಕ್ರಮ. ಮುಂದಿನ ಅಕ್ಟೋಬರ್ 2 ರವರೆಗೆ ಅಳವಡಿಸಿಕೊಳ್ಳಲಾಗುವುದು ಎಂದು ವಿವರಿಸಿದರು.

ಹಿರಿಯ ಸಾಹಿತಿ ಡಾ.ಸರಜೂ ಕಾಟ್ಕರ್, ದೇಶಪಾಂಡೆ ಸ್ಮಾರಕ ಟ್ರಸ್ಟ್ ಅಧ್ಯಕ್ಷ ರವೀಂದ್ರ ದೇಶಪಾಂಡೆ, ಪ್ರೊ.ಮರಾಠೆ, ನಿಲೇಶ್ ಬೇನಾಳ ಮತ್ತಿತರರು ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಬಗ್ಗೆ ಸಲಹೆಗಳನ್ನು ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಬೆಳಗಾವಿ ಉತ್ತರ ಶಾಸಕರಾದ ಆಸಿಫ್(ರಾಜು) ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಓ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಸಮಿತಿಯ ಸದಸ್ಯ ಎನ್.ಆರ್.ವಿಶುಕುಮಾರ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...