
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರಕ್ಕೆ 3000 ಮನೆಗಳನ್ನು ಮಂಜೂರು ಮಾಡಿದ್ದಾರೆ. ನಂಜನಗೂಡಿನ ವರುಣ ಕ್ಷೇತ್ರದ ಸುತ್ತೂರಿನಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ವರುಣ ಕ್ಷೇತ್ರದ ಜನರು ಸಿದ್ದರಾಮಯ್ಯ ಅವರು ಎರಡು ಬಾರಿ ಮುಖ್ಯಮಂತ್ರಿ ಆಗಲು ಆಶೀರ್ವಾದ ಮಾಡಿದ್ದಾರೆ. ನನಗೆ ಒಂದು ಬಾರಿ ಗೆಲ್ಲಿಸಿದ್ದೀರಿ. ಹಾಗಾಗಿ ಗ್ರಾಮದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಸುತ್ತೂರು ಗ್ರಾಮದ ಆಸ್ಪತ್ರೆ ಉನ್ನತೀಕರಣ, ಆಂಬುಲೆನ್ಸ್, ಕಾಯಂ ವೈದ್ಯರು, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಗ್ರಂಥಾಲಯಕ್ಕೆ ಹೊಸ ಕಟ್ಟಡ, ನಾಲೆಗೆ ತಡೆಗೋಡೆ, ಚರಂಡಿ, ರಸ್ತೆ ಅಭಿವೃದ್ಧಿ, ಕಾಂಕ್ರೀಟ್ ರಸ್ತೆ ನಿರ್ಮಾಣ ಸೇರಿ ಹಲವು ಬೇಡಿಕೆಗಳ ಪಟ್ಟಿ ನೀಡಲಾಗಿದ್ದು, ಎಲ್ಲಾ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.