
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವ ವಿಚಾರವಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ನೋಟೀಸ್ ನೀಡುವ ಮೂಲಕ ರಾಜಕೀಯವಾಗಿ ನಡೆದುಕೊಂಡಿದ್ದಾರೆ. ರಾಜ್ಯಪಾಲರ ಇಂತಹ ನಡೆ ಸರಿಯಲ್ಲ. ಜೈಲಿಗೆ ಹೋಗಬೇಕಾದವರು ಎಲಾ ಪಕ್ಷಗಳಲ್ಲಿಯೂ ಇದ್ದಾರೆ. ಆಡಳಿತ ಪಕ್ಷದಲ್ಲಿ ಮಾತ್ರವಲ್ಲ, ವಿಪಕ್ಷಗಳಲ್ಲಿಯೂ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯಪಾಲರು ತಮ್ಮ ನಡೆಯನ್ನು ಇನ್ನೆರಡು ದಿನಗಳೊಳಗಾಗಿ ಬದಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಪಾಲರ ಕ್ರಮ ಖಂಡಿಸಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.