ಬೆಂಗಳೂರು: ಹಿರಿಯ ಲೇಖಕಿ ನಾಡೋಜ ಡಾ. ಕಮಲಾ ಹಂಪನಾ ಇಂದು ಬೆಳಗಿನ ಜಾವ ರಾಜರಾಜೇಶ್ವರಿ ನಗರದ ಮಗಳ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಮಲಾ ಹಂಪನಾ ಅವರು ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ ಸಿ. ರಂಗಧಾಮನಾಯಕ್-ಲಕ್ಷಮ್ಮ ದಂಪತಿಗಳ ಪುತ್ರಿಯಾಗಿ 1935ರ ಅಕ್ಟೋಬರ್ 28ರಂದು ಜನಿಸಿದರು. ಚಳ್ಳಕೆರೆಯಲ್ಲಿ ಪ್ರಾರಂಭವಾದ ಪ್ರಾಥಮಿಕ ವಿದ್ಯಾಭ್ಯಾಸ ಬೇರೆ ಬೇರೆ ಊರುಗಳಲ್ಲಿ ಮುಂದುವರಿಯಿತು. ತುಮಕೂರಿನಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸವಾಗಿ, 1953ರಲ್ಲಿ ಎಸ್.ಎಸ್.ಎಲ್.ಸಿ ಮುಗಿಸಿದರು. ಕಾಲೇಜು ವಿದ್ಯಾಭ್ಯಾಸ ಮೈಸೂರಿನಲ್ಲಿ ಮುಂದುವರೆದು 1955-58ರಲ್ಲಿ ಬಿ.ಎ. ಆನರ್ಸ್ ಮಾಡಿದರು. 1959 ರಲ್ಲಿ ಕನ್ನಡ ಅಧ್ಯಾಪಕಿಯಾಗಿ ಶಿಕ್ಷಣ ವೃತ್ತಿಗೆ ಪ್ರವೇಶಿಸಿ, ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಬೆಂಗಳೂರಿನ ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲೆ ಆಗಿ ಕಾರ್ಯ ನಿರ್ವಹಿಸಿದರು. ಸರ್ಕಾರಿ ಸೇವೆಯಿಂದ ನಿವೃತ್ತರಾದ ಮೇಲೆ ಮೈಸೂರು ವಿಶ್ವವಿದ್ಯಾಲಯದ ಜೈನಶಾಸ್ತ್ರ, ಪ್ರಾಕೃತ ಅಧ್ಯಯನದ ಪ್ರಾಧ್ಯಾಪಕರೂ, ಅಧ್ಯಕ್ಷರೂ, ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕರೂ ಆಗಿದ್ದರು.
ಹಂ.ಪ.ನಾಗರಾಜಯ್ಯನವರು ಇವರ ಪತಿ. ಸ್ತ್ರೀ ಸಂವೇದನೆಗೆ ಸಂಬಂಧಿಸಿದ ಅವರ ಸಂಶೋಧನೆಗಳು ಅವರಿಗೆ ಗೌರವಗಳನ್ನು ತಂದುಕೊಟ್ಟಿವೆ. ಕಮಲಾ ಹಂಪನಾ ಅವರು ಕನ್ನಡದ ಲೇಖಕರು. ಅವರು ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಪ್ರಾಚೀನ ಅರ್ವಾಚೀನ ಕೃತಿಗಳ ಅನುಸಂಧಾನಕಾರರಾಗಿ ಶ್ರಮಿಸಿದ್ದಾರೆ. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡು ಆ ಎಲ್ಲ ಪ್ರಕಾರಗಳಲ್ಲೂ ಕೊಡುಗೆಗಳನ್ನು ನೀಡಿದ್ದಾರೆ.
ನಕ್ಕಿತು ಹಾಲಿನ ಬಟ್ಟಲು, ರೆಕ್ಕೆ ಮುರಿದಿತ್ತು, ಚಂದನಾ, ಬಣವೆ, ತುರಂಗ ಭಾರತ – ಒಂದು ಅಧ್ಯಯನ, ಶಾಂತಿನಾಥ, ಆದರ್ಶ ಜೈನ ಮಹಿಳೆಯರು, ಅನೇಕಾಂತವಾದ, ನಾಡು ನುಡಿ ನಾವು, ಜೈನ ಸಾಹಿತ್ಯ ಪರಿಸರ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ.