ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಾಜ್ಯದ 17 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಐವರು ಸಚಿವರ ಮಕ್ಕಳಿಗೆ ಟಿಕೆಟ್ ಘೋಷಣೆಯಾಗಿದೆ. ಸಂಬಂಧಿಕರಿಗೂ ಟಿಕೆಟ್ ನೀಡಲಾಗಿದೆ.
ಅಭ್ಯರ್ಥಿಗಳ ಆಯ್ಕೆಗೆ ಗೆಲುವಿನ ಮಾನದಂಡವನ್ನು ಪರಿಗಣಿಸಿ ಪ್ರಭಾವಿ ರಾಜಕೀಯ ಕುಟುಂಬಗಳಿಗೆ ಕಾಂಗ್ರೆಸ್ ಮಣೆ ಹಾಕಿದೆ.
ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಅವರಿಗೆ ಚಿಕ್ಕೋಡಿಯಿಂದ ನೀಡಲಾಗಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಗೆ ಬೆಳಗಾವಿಯಿಂದ ಟಿಕೆಟ್ ಘೋಷಣೆಯಾಗಿದೆ.
ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಅವರಿಗೆ ಬಾಗಲಕೋಟೆಯಿಂದ ಟಿಕೆಟ್ ನೀಡಲಾಗಿದೆ.
ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ದಿಂದ ಟಿಕೆಟ್ ನೀಡಲಾಗಿದೆ.
ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಅವರಿಗೆ ಬೀದರ್ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ದಾವಣಗೆರೆಯಿಂದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.
ಸಚಿವ ಮಧು ಬಂಗಾರಪ್ಪ ಸಹೋದರಿ ಗೀತಾ ಶಿವರಾಜ್ ಕುಮಾರ್ ಅವರಿಗೆ ಶಿವಮೊಗ್ಗ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ಅವರಿಗೆ ಕಲಬುರ್ಗಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ಶಾಸಕ ರಾಘವೇಂದ್ರ ಹಿಟ್ನಾಳ್ ಸಹೋದರ ರಾಜಶೇಖರ ಹಿಟ್ನಾಳ್ ಅವರಿಗೆ ಕೊಪ್ಪಳ ಕ್ಷೇತ್ರದ ಟಿಕೆಟ್ ನೀಡಲಾಗಿದೆ.
30 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮೃಣಾಲ್ ಹೆಬ್ಬಾಳ್ಕರ್, ಪ್ರಿಯಾಂಕಾ ಜಾರಕಿಹೊಳಿ, ಸಾಗರ್ ಖಂಡ್ರೆ ಮತ್ತು ಸಂಯುಕ್ತ ಪಾಟೀಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಜೆಡಿಎಸ್ ಕುಟುಂಬ ರಾಜಕಾರಣದ ಬಗ್ಗೆ ಟೀಕಿಸುತ್ತಿದ್ದ ಕಾಂಗ್ರೆಸ್ ನಲ್ಲಿಯೂ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ.