ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮತ್ತೆ ಮುಂದುವರೆದಿದೆ. ತಮ್ಮ ಸಾಕು ನಾಯಿಯೊಂದಿಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಐದಾರು ನಾಯಿಗಳು ಏಕಾಏಕಿ ದಾಳಿ ನಡೆಸಿರುವ ಭೀಕರ ಘಟನೆ ನಡೆದಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ 191 ರ ಸಿಲ್ವರ್ ಕೌಂಟಿ ರಸ್ತೆಯಲ್ಲಿರುವ ಕೂಡ್ಲು, ಬಳಿಯ ಎಸ್‌ಜೆಆರ್ ಬ್ಲೂ ವಾಟರ್ಸ್ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ಈ ಅಪಾರ್ಟ್ಮೆಂಟ್ ನಲ್ಲಿ ಬೀದಿ ನಾಯಿಗಳ ಹಾವಳಿ ಕುರಿತಂತೆ ಈ ಹಿಂದೆಯೇ ಸಂಬಂಧಪಟ್ಟವರಿಗೆ ತಿಳಿಸಿದ್ದರೂ ಸಹ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಪಾರ್ಟ್ಮೆಂಟ್ ನಿವಾಸಿಗಳು ಆರೋಪಿಸಿದ್ದಾರೆ. ಹೀಗಾಗಿ ಬೀದಿ ನಾಯಿಗಳ ಹಾವಳಿಯಿಂದ ಅಪಾರ್ಟ್ಮಮೆಂಟ್ ನಿವಾಸಿಗಳು ಜೀವಭಯದಿಂದಲೇ ಓಡಾಡುವಂತಾಗಿದೆ.
ಇಲ್ಲಿಯೇ ಎರಡು ಶಾಲೆಗಳಿದ್ದು, ಪೋಷಕರು ತಮ್ಮ ಮಕ್ಕಳನ್ನು ಒಬ್ಬಂಟಿಯಾಗಿ ಕಳುಹಿಸಲು ಹಿಂದೇಟು ಹಾಕುವಂತಾಗಿದೆ. ಅಪಾರ್ಟ್ಮೆಂಟ್ ನಲ್ಲಿ ಓಡಾಡುವವರ ಮೇಲೆ ಈ ಹಿಂದೆಯೂ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ನಡೆದಿತ್ತು. ಇದು ಈಗ ಮತ್ತೆ ಮುಂದುವರೆದಿದೆ.
ಮುಂದಿನ ದಿನಗಳಲ್ಲಿ ಹೆಚ್ಚಿನ ಅನಾಹುತ ಸಂಭವಿಸುವ ಬೆಂಗಳೂರು ಮಹಾನಗರ ಪಾಲಿಕೆಯವರು ಕೂಡಲೇ ಸೂಕ್ತ ಕ್ರಮ ಕೈಗೊಂಡು ಬೀದಿ ನಾಯಿಗಳನ್ನು ಹಿಡಿದು ನೆಮ್ಮದಿ ನೀಡಬೇಕೆಂದು ನಿವಾಸಿಗಳು ಆಗ್ರಹಿಸಿದ್ದಾರೆ.