
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀರ್ ದೆಹಲಿಗೆ ತೆರಳಿದ್ದಾರೆ.
ಆಪ್ತರೊಂದಿಗೆ ಬೆಳಗಿನ ಜಾವ ದೆಹಲಿಗೆ ಪ್ರಯಾಣ ಬೆಳೆಸಿದ ಅವರು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ.
ಬೆಳಿಗ್ಗೆ ದೆಹಲಿಗೆ ದೌಡಾಯಿಸಿದ ವಿಜಯೇಂದ್ರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ನಡೆದಿರುವ ಬೆಳವಣಿಗೆಗಳ ಕುರಿತು ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಾಗ ಸಿ.ಪಿ. ಯೋಗೇಶ್ವರ್ ಕೂಡ ವಿಜಯೇಂದ್ರ ಜೊತೆಗಿದ್ದರು. ಈಗ ಯೋಗೇಶ್ವರ್ ನಾಯಕತ್ವ ಬದಲಾವಣೆ ಬಗ್ಗೆ ಪ್ರಸ್ತಾಪಿಸಿರುವುದು ಬಿಜೆಪಿ ವಲಯದಲ್ಲಿ ಸಂಚಲನ ಮೂಡಿಸಿದೆ. ಯಡಿಯೂರಪ್ಪ ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲವೆಂದು ಪಕ್ಷದ ನಾಯಕರು, ಶಾಸಕರು ಹೇಳುತ್ತಿದ್ದರೂ, ಇದರ ಹೊರತಾದ ತೆರೆಮರೆ ಚಟುವಟಿಕೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ದಿಢೀರ್ ದೆಹಲಿ ಭೇಟಿ ಕುತೂಹಲ ಮೂಡಿಸಿದೆ ಎನ್ನಲಾಗಿದೆ.