ಉಡುಪಿ: ವ್ಯಾಜ್ಯ ಮುಕ್ತ ಗ್ರಾಮದ ಗುರಿಯೊಂದಿಗೆ ರಾಜ್ಯದಲ್ಲಿ ಮತ್ತೆ ಗ್ರಾಮ ನ್ಯಾಯಾಲಯಗಳನ್ನು ಆರಂಭಿಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಉಡುಪಿ ಬ್ರಹ್ಮಾವರ ತಾಲೂಕಿನ ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಪ್ರತಿ ಗ್ರಾಮವು ವ್ಯಾಜ್ಯ ಮುಕ್ತವಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ರಾಜ್ಯದಲ್ಲಿ ಗ್ರಾಮ ನ್ಯಾಯಾಲಯಗಳನ್ನು ಪುನಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ದಶಕಗಳಿಂದ ದೇಶದಲ್ಲಿ ಬಾಕಿ ಉಳಿದ ಪ್ರಕರಣಗಳ ಇತ್ಯರ್ಥಕ್ಕೆ 2006 -08 ರಲ್ಲಿ ಗ್ರಾಮ ನ್ಯಾಯಾಲಯಗಳನ್ನು ಜಾರಿಗೆ ತರಲಾಗಿತ್ತು. ಹಿಮಾಚಲ ಪ್ರದೇಶ ಹೊರತುಪಡಿಸಿ ಉಳಿದದೆ ಸ್ಥಗಿತಗೊಂಡಿವೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಕಿ ಪ್ರಕರಣಗಳ ಹಿನ್ನೆಲೆಯಲ್ಲಿ ಈ ವರ್ಷ ಗ್ರಾಮ ನ್ಯಾಯಾಲಯಗಳನ್ನು ಪುನರಾರಂಭ ಮಾಡಲಾಗುವುದು. ಮೊದಲಿಗೆ ಎರಡು ಗ್ರಾಮ ನ್ಯಾಯಾಲಯ ಆರಂಭಿಸಿ ಮುಂದೆ ಅಗತ್ಯ ಮೂಲ ಸೌಕರ್ಯ ಹೊಂದಿಸಿಕೊಂಡು 2000 ಗ್ರಾಮಗಳಲ್ಲಿ ನ್ಯಾಯಾಲಯ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.