ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಇನ್ ಸೈಟ್ಸ್ ಅಕಾಡೆಮಿ ಸಂಸ್ಥಾಪಕ ಜಿ.ಬಿ. ವಿನಯಕುಮಾರ್ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದ ಸ್ವಾಮೀಜಿ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕೂಡ ಇದ್ದರು. ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುವಂತೆ ವಿನಯ್ ಕುಮಾರ್ ಅವರಿಗೆ ತಿಳಿಸಲಾಗಿತ್ತು. ಈ ವೇಳೆ ತೀರ್ಮಾನ ಕೈಗೊಳ್ಳಲು ಎರಡು ದಿನಗಳ ಕಾಲಾವಕಾಶ ಕೋರಿದ ವಿನಯ್ ಕುಮಾರ್ ಸೋಮವಾರ ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿದ್ದಾರೆ,
ಸಿದ್ದರಾಮಯ್ಯ ನನ್ನ ಮೇಲಿನ ವೈಯಕ್ತಿಕ ಕಾಳಜಿಯಿಂದ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ತಿಳಿಸಿದ್ದಾರೆ. ಆದರೆ, ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ನಿರ್ಧಾರ ಪ್ರಕಟಿಸಿದ್ದಾರೆ. ಈ ಮೂಲಕ ವಿನಯ್ ಕುಮಾರ್ ಕಾಂಗ್ರೆಸ್ ಗೆ ದಾವಣಗೆರೆಯಲ್ಲಿ ಬಿಸಿ ತುಪ್ಪವಾಗಿದ್ದಾರೆ.