ಡಿಜಿಟಲ್ ಡೆಸ್ಕ್ : ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಇದುವರೆಗೆ 105 ಮಂದಿ ಮೃತಪಟ್ಟಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ದೇಶಾದ್ಯಂತ ಅಶಾಂತಿ ವಾತಾವರಣ ಮೂಡಿದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಅಧಿಕಾರಿಗಳು ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಿದ್ದಾರೆ. ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 105 ಜನರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಉದ್ಯೋಗಗಳ ಬಗ್ಗೆ ಸರ್ಕಾರದ ಅಸ್ತಿತ್ವದಲ್ಲಿರುವ ಕೋಟಾ ನೀತಿಯಲ್ಲಿ ಸುಧಾರಣೆಗಳನ್ನು ವಿದ್ಯಾರ್ಥಿಗಳು ಒತ್ತಾಯಿಸುತ್ತಿರುವುದರಿಂದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೆ ಇದು ಕಠಿಣ ರಾಜಕೀಯ ಸವಾಲನ್ನು ಒಡ್ಡಿದೆ.
ರಾಷ್ಟ್ರವನ್ನುದ್ದೇಶಿಸಿ ಮಾಡಿದ ದೂರದರ್ಶನ ಭಾಷಣದಲ್ಲಿ, ಪ್ರಧಾನಿ ಶೇಖ್ ಹಸೀನಾ ಅವರು ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಲು ಮಾತುಕತೆಗೆ ವಿದ್ಯಾರ್ಥಿಗಳನ್ನು ಆಹ್ವಾನಿಸಿದರು. ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ, ವಿದ್ಯಾರ್ಥಿಗಳು ಸರ್ಕಾರದ ಪ್ರಸ್ತಾಪವನ್ನು ಸ್ವೀಕರಿಸುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ.
ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಇದು ದೇಶದ “ಆಂತರಿಕ” ವಿಷಯ ಎಂದು ಶುಕ್ರವಾರ ಹೇಳಿದ್ದಾರೆ. ಪ್ರಸ್ತುತ ಬಾಂಗ್ಲಾದೇಶದಲ್ಲಿ 8,500 ವಿದ್ಯಾರ್ಥಿಗಳು ಸೇರಿದಂತೆ ಸುಮಾರು 15,000 ಭಾರತೀಯರು ವಾಸಿಸುತ್ತಿದ್ದಾರೆ, ಅವರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಎಂಇಎ ವಕ್ತಾರರು ತಿಳಿಸಿದ್ದಾರೆ.